BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ಬಂತು 'ಮಾಸ್ಟರ್ ಪ್ಲಾನ್': ಡಿಸಿಎಂ ಡಾ. ಜಿ. ಪರಮೇಶ್ವರ್ ಪ್ರಕಟಣೆ!

 

ಕುಂದಾಪುರ (ಉಡುಪಿ): ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಹೈಟೆಕ್ 'ಮಾಸ್ಟರ್ ಪ್ಲಾನ್' ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಇದನ್ನು ಕಾರ್ಯಗತಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವ‌ರ್ ತಿಳಿಸಿದ್ದಾರೆ.

ಭಾನುವಾರ ತಮ್ಮ ಪತ್ನಿಯೊಂದಿಗೆ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ್ದ ಅವರು, ದೇವಿಯ ವಿಶೇಷ ದರ್ಶನ ಪಡೆದು ಬಳಿಕ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ದೇವಾಲಯದ ಹಿರಿಯ ಅರ್ಚಕರಾದ ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಪೂಜೆಯ ನಂತರ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಡಿಸಿಎಂ ಅವರಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಭಕ್ತಾದಿಗಳಿಗೆ ಸಿಗಲಿದೆ ಅತ್ಯಾಧುನಿಕ ಮೂಲಸೌಕರ್ಯ!

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, "ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅವರಿಗೆ ಯಾವುದೇ ತೊಂದರೆಯಾಗದಂತೆ ಸುಲಭ ದರ್ಶನ, ವಿಸ್ತಾರವಾದ ಪಾರ್ಕಿಂಗ್ ವ್ಯವಸ್ಥೆ ಹಾಗೂ ವಸತಿ ಸೇರಿದಂತೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬೃಹತ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು" ಎಂದರು.

ಮುಜರಾಯಿ ಜಮೀನು ಒತ್ತುವರಿ ತೆರವಿಗೂ ಖಡಕ್ ಆಜ್ಞೆ!

ಇದೇ ವೇಳೆ ರಾಜ್ಯದಲ್ಲಿರುವ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯ ದೇವಸ್ಥಾನಗಳ ಆಸ್ತಿ ರಕ್ಷಣೆ ಕುರಿತು ಮಾತನಾಡಿದ ಸಚಿವರು, "ರಾಜ್ಯದ ಮುಜರಾಯಿ ದೇವಸ್ಥಾನಗಳಿಗೆ ಸೇರಿದ ಜಮೀನುಗಳು ಎಲ್ಲೆಲ್ಲಿ ಒತ್ತುವರಿಯಾಗಿದೆಯೋ, ಆ ಎಲ್ಲಾ ಒತ್ತುವರಿಗಳನ್ನು ತಕ್ಷಣವೇ ತೆರವುಗೊಳಿಸಲು ಮುಜರಾಯಿ ಇಲಾಖೆ ಆಯುಕ್ತರಿಗೆ ಹಾಗೂ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಈ ವಿಷಯದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾ‌ರ್ ಶೆಟ್ಟಿ ಹಾಗೂ ಸಮಿತಿಯ ಸದಸ್ಯರಾದ ಅಭಿಲಾಷ್ ಪಿ.ವಿ., ಸುರೇಂದ್ರ ಶೆಟ್ಟಿ, ರಘುರಾಮ್ ದೇವಾಡಿಗ, ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!