ಹಾವೇರಿ, ಜುಲೈ 10 : ಮಗನ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸುವ ಮೂಲಕ ರಾಜ್ಯದ ಹಾವೇರಿ ಶಾಲಾ ಶಿಕ್ಷಕಿ ಇತರರಿಗೆ ಮಾದರಿಯಾಗಿದ್ದಾರೆ. ಶಿಕ್ಷಕಿಯ ಈ ಸಮಾಜ ಮುಖಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಮಗನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಬದಲು, ಆ ಹಣವನ್ನು ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬಳಸಿದ ಹಾವೇರಿ ಜಿಲ್ಲೆಯ ಸರ್ಕಾರಿ ಉರ್ದು ಶಾಲೆಯ ಮುಖ್ಯಶಿಕ್ಷಕಿ ಉಮೈ ಸಲ್ಮಾ ಕಡೂರು ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಸರ್ಕಾರಿ ಉರ್ದು ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಮೈ ಸಲ್ಮಾ ಅವರು, ತಮ್ಮ ಪುತ್ರ ಮಲ್ಲೀಕ್ ರೆಹನ್ ಅವರ 26ನೇ ಹುಟ್ಟುಹಬ್ಬದ ಅಂಗವಾಗಿ ಸುಮಾರು ₹2 ಲಕ್ಷ ಸ್ವಂತ ಹಣ ವೆಚ್ಚ ಮಾಡಿ ಶಾಲೆಗೆ ಸಂಪೂರ್ಣ ಬಣ್ಣ ಬಳಿಸಿದ್ದಾರೆ.
ಬಣ್ಣವಿಲ್ಲದೆ ಕಳೆಗುಂದಿದ್ದ ಶಾಲೆಗೆ ಹೊಸ ರೂಪ ನೀಡಲಾಗಿದ್ದು, ಗೋಡೆಗಳನ್ನು ರೈಲ್ವೆ ಬೋಗಿಯ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಶಾಲೆಯ ವಾತಾವರಣ ಆಕರ್ಷಕವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಗೆ ಆಗಮಿಸುತ್ತಿದ್ದಾರೆ.
ಪ್ರಸ್ತುತ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮುಖ್ಯಶಿಕ್ಷಕಿಯ ಈ ಸಮಾಜಮುಖಿ ಕಾರ್ಯಕ್ಕೆ ಗ್ರಾಮಸ್ಥರು, ಪೋಷಕರು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

