ಇಡುಕ್ಕಿ, ಜುಲೈ 07 : ಪಹಲ್ಗಾಂನಲ್ಲಿ ನಡೆದ ಉಗ್ರದ ದಾಳಿ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕೇರಳದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪರವೂರು ಮೂಲದ ಮೊಹಮ್ಮದ್ ಸನೂಪ್ (26) ಬಂಧಿತ ಆರೋಪಿಯಾಗಿದ್ದು ಈತನ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA act) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಆರೋಪಿ ಮೊಹಮ್ಮದ್ ಭಾರತಕ್ಕೆ ಮರಳಿದ ವೇಳೆ ಕರಿಪುರ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದು ಬಳಿಕ ಮುಟ್ಟೋಮ್ ಪೊಲೀಸರಿಗೆ ಹಸ್ತಾಂತರಿಸಿದ್ದರು
ಪಹಲ್ಗಾಂ ಉಗ್ರ ದಾಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಆತ ಪ್ರಕಟಿಸಿದ್ದ ದೇಶ ವಿರೋಧಿ ಪೋಸ್ಟ್‌ಗಳ ವಿರುದ್ಧ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅದೀನಾ ಭಾರತಿ ದೂರು ನೀಡಿದ್ದರು. ಸುಮಾರು ಒಂದು ವರ್ಷದ ಹಿಂದಿನ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಆಧಾರವಾಗಿ ನೀಡಿ ದೂರು ದಾಖಲಿಸಲಾಗಿತ್ತು.
ಪೊಲೀಸರು ನಡೆಸಿದ ತನಿಖೆಯಲ್ಲಿ ಆರೋಪದ ಕುರಿತು ಸಾಕಷ್ಟು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸನೂಪ್‌ನನ್ನು ಬಂಧಿಸಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪಹಲ್ಗಾಂ ದಾಳಿಯಂತಹ ಸೂಕ್ಷ್ಮ ಘಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಥವಾ ಕಾನೂನುಬಾಹಿರ ವಿಷಯಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
