ಮಣಿಪಾಲ್, ಜುಲೈ 10 :ಸ್ಕೂಲ್ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಮಣಿಪಾಲದ ಬಳಿಯ ಕೊಡಂಗೆಯಲ್ಲಿ ನಡೆದಿದೆ.
ಇಲ್ಲಿನ ಖಾಸಗಿ ಶಾಲೆಗೆ ಸೇರಿದ ಬಸ್ 20 ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆ ನೋಡಿದ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು.
ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಣಿಪಾಲ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
