ಉಡುಪಿ, ಜುಲೈ 07 : ಪುರಾಣ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೋರ್ವಳಿಂದ ಕಳವು ಮಾಡಿದ್ದ ನಗದಿನ ಪ್ರಕರಣವನ್ನು 24 ಗಂಟೆಗಳಲ್ಲಿ ಭೇದಿಸಿ ಮೂವರು ಕಳ್ಳಿಯರ ಹಡೆಮುರಿ ಕಟ್ಟಲು ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆಯ ವಿವರ :
ಜುಲೈ 5ರಂದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಶ್ರೀ ದೇವರ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಪತ್ತೆಯಾಯಿತು. ಸುತ್ತಮುತ್ತ ಹುಡುಕಿದರೂ ಪರ್ಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 43/2026, ಕಲಂ 303(2) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡವು ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
ನೇತ್ರಾವತಿ (33), ಶಾರದ (50) ಮತ್ತು ದುರ್ಗಮ್ಮ (44) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತನಿಖೆಯಲ್ಲಿ ದುರ್ಗಮ್ಮ ವಿರುದ್ಧ ಈಗಾಗಲೇ ಮೈಸೂರು ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ.
ಶಾರದ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ.
ಪ್ರಕರಣದ ಬೆನ್ನತ್ತಿ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿದ ಪೊಲೀಸ್ ತಂಡದ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
