ಬೆಳ್ತಂಗಡಿ, ಆಗಸ್ಟ್ 17 : ಪುಂಜಾಲಕಟ್ಟೆ ಠಾ ಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ 82 ವರ್ಷದ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವೃದ್ಧೆಯ ಸ್ವಂತ ಮೊಮ್ಮಗನೇ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ, ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಎರಡು ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ, ಅಂದಾಜು 5 ಲಕ್ಷ ರೂ. ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದರು. ಈ ವೇಳೆ ವೃದ್ಧೆ ಅವ್ವಮ್ಮ ಅವರ ಕೈಗೆ ಗಾಯವಾಗಿತ್ತು.
ಈ ಕುರಿತು ಅವ್ವಮ್ಮ ಅವರ ಪುತ್ರ ಸಾದಿಕ್ ಅವರು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 70/2026, ಕಲಂ 309(6) BNS-2023ರಡಿ ಪ್ರಕರಣ ದಾಖಲಾಗಿತ್ತು.
ಮೊಮ್ಮಗನೇ ಆರೋಪಿ:
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆಗಸ್ಟ್ 16ರಂದು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತೆಂಕಕಜೆಕಾರು ನಿವಾಸಿ ಹಾಗೂ ವೃದ್ಧೆ ಅವ್ವಮ್ಮ ಅವರ ಸ್ವಂತ ಮೊಮ್ಮಗ ಶಬೀರ್ (33) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣೆ ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಸಿಬ್ಬಂದಿಗಳಾದ ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್, ಸತೀಶ್ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ಅವರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.