BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Kalaburagi ಕಲಬುರಗಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಶಿಕ್ಷಕನಿಗೆ 25 ವರ್ಷ ಜೈಲು ಶಿಕ್ಷೆ


ಕಲಬುರಗಿ, ಆಗಸ್ಟ್ 14 :  ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಖಾಸಗಿ ಶಾಲೆಯ ಶಿಕ್ಷಕನೊಬ್ಬನಿಗೆ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯವು ಬರೋಬ್ಬರಿ 25 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ತುಪ್ಪದ್ ಈ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಆರೋಪಿ ಹಾಜಿಮಲಾಂಗ್, ಶಾಲೆಯ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಟ್ಯೂಷನ್ ನೀಡುತ್ತಿದ್ದ. ಈ ವೇಳೆ ಕೆಲವು ವಿದ್ಯಾರ್ಥಿಗಳನ್ನು ರಾತ್ರಿ ಶಾಲೆಯಲ್ಲೇ ಉಳಿಯುವಂತೆ ಮಾಡುತ್ತಿದ್ದ.

2024ರ ಮೇ ತಿಂಗಳಲ್ಲಿ ಬಾಲಕಿಯನ್ನು ಶಾಲಾ ಕಟ್ಟಡದ ಕೊಠಡಿಗೆ ಕರೆಸಿ, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ. ಅಲ್ಲದೆ, ಈ ವಿಚಾರ ಯಾರಿಗಾದರೂ ತಿಳಿಸಿದರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆದರೂ ಹೆದರದೆ ಬಾಲಕಿ ಈ ಕುರಿತು ಮಹಿಳಾ ಶಿಕ್ಷಕಿಯೊಬ್ಬರಿಗೆ ಮಾಹಿತಿ ನೀಡಿದ್ದಳು. ಬಳಿಕ ಯಡ್ರಾಮಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಲಬುರಗಿ ಸಹಾಯಕ ಪೊಲೀಸ್‌ ಆಯುಕ್ತ ಬಿಂದುಮಣಿ ಆರ್‌.ಎನ್‌. ಅವರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆದು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಎಸ್‌.ಎಲ್‌. ಚೌಹಾಣ್‌ ಅವರು ತೀರ್ಪು ಪ್ರಕಟಿಸಿದ್ದಾರೆ.

ಅಲ್ಲದೆ, ಸಂತ್ರಸ್ತ ಬಾಲಕಿಗೆ ರೂ. 6 ಲಕ್ಷ ಪರಿಹಾರ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಿರುವ ನ್ಯಾಯಾಲಯ, ತೀರ್ಪು ಪ್ರಕಟವಾದ ಒಂದು ತಿಂಗಳೊಳಗೆ ಈ ಮೊತ್ತವನ್ನು ಪಾವತಿಸುವಂತೆ ಆದೇಶಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!