ಮಂಗಳೂರು, ಆಗಸ್ಟ್ 06: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ನಡೆದ ರ‍್ಯಾಗಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ವಿದ್ಯಾರ್ಥಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಅದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಮೇಲೆ ಆರು ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಆರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಕಾಲೇಜಿನ ಕ್ಯಾಂಪಸ್ ಒಳಗೂ ಹೊರಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತ ವಿದ್ಯಾರ್ಥಿಗಳ ಆರೋಪದ ಪ್ರಕಾರ, ಕೆಲ ಹಿರಿಯ ವಿದ್ಯಾರ್ಥಿಗಳು ಜೂನಿಯರ್‌ಗಳನ್ನು ತಮ್ಮ ಖಾಸಗಿ ಕೊಠಡಿಗಳಿಗೆ ಕರೆದುಕೊಂಡು ಹೋಗಿ ಅವಮಾನಕಾರಿ ರೀತಿಯಲ್ಲಿ ವರ್ತಿಸುತ್ತಿದ್ದರು. ಬಟ್ಟೆ ಬಿಚ್ಚಿಸಿ ಕೇವಲ ಒಳ ಉಡುಪಿನಲ್ಲಿ ಕೂರಿಸುವುದು, ವಿಚಿತ್ರ ಹಾಗೂ ಅವಹೇಳನಕಾರಿ ಕೃತ್ಯಗಳನ್ನು ಮಾಡಿಸುವುದು, ಕರೆದಾಗ ಹೋಗದಿದ್ದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸುವುದು ಸೇರಿದಂತೆ ಹಲವು ರೀತಿಯ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ದೂರು ದಾಖಲಾಗುತ್ತಿದ್ದಂತೆಯೇ ಪಾಂಡೇಶ್ವರ ಠಾಣೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ, ಆರೋಪಿತ ಆರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ರ‍್ಯಾಗಿಂಗ್ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.