ಶಿವಮೊಗ್ಗ,ಆಗಸ್ಟ್ 02 : ಭಾರಿ ಮಳೆಯ ಕಾರಣ ಗುಡ್ಡ ಕುಸಿದು ಶೆಡ್ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ನಡೆದಿದೆ. ರವಿವಾರ ಬೆಳಗಿನ ಜಾವ 2:30ರ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ (35), ನಾಗವೇಣಿ (28), ಸಂತೋಷ (3) ಮೃತ ದುರ್ದೈವಿಗಳಾಗಿದ್ದಾರೆ. ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೂವರ ಮೃತದೇಹಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಪಕ್ಕದ ಶೆಡ್‌ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.