ಯಾದಗಿರಿ, ಆಗಸ್ಟ್ 23 : ವಿದ್ಯುತ್ ಕಂಬಕ್ಕೆ ಬುಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, ಸುಮಾರು 15 ಮಂದಿ ಗಾಯಗೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಭಾಗ್ಯಶ್ರೀ (35), ಸತ್ಯಮ್ಮ (30) ಮತ್ತು ಹೊನ್ನಿಂಗಮ್ಮ (18) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಘಟನೆಯ ವಿವರ:
ಕಾರ್ಮಿಕರು ಬೆಳಗಿನ ಜಾವವೇ ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕಾಗಿ ತೆರಳಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಒಟ್ಟು 15 ಮಂದಿ ಕಾರ್ಮಿಕರನ್ನು ತಕ್ಷಣವೇ ಶಹಾಪುರ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.ಸ್ಥಳ ಪರಿಶೀಲನೆ: ಅಪಘಾತದ ಸುದ್ದಿ ತಿಳಿದ ಕೂಡಲೇ ಭೀಮರಾಯನಗುಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಗಿಲು ಮುಟ್ಟಿದ ಆಕ್ರಂದನ: ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರ ಹಾಗೂ ಸಂಬಂಧಿಕರ ರೋಧನ ಸ್ಥಳದಲ್ಲಿ ಎಲ್ಲರ ಕಣ್ಣೀರು ತರಿಸುವಂತಿತ್ತು. ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.