ಬಂಟ್ವಾಳ,ಸೆ 24: ಇತ್ತೀಚೆಗೆ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಬಳಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಕಾರು ಅಪಘಾತಕ್ಕೀಡಾಗಿದ್ದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಕಾಮೆಂಟ್ ಹಾಕಿದ ಆರೋಪದ ಮೇರೆಗೆ ಪ್ರಭಾಕರ ಹೆಗ್ಡೆ ಎಂಬಾತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗಿದ್ದ ಅಪಘಾತದ ದೃಶ್ಯದ ಪೋಸ್ಟ್‌ಗೆ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬುಡಾ ಅಧ್ಯಕ್ಷ ಬೇಬಿ ಕುಂದರ್ ನೇತೃತ್ವದಲ್ಲಿ ತೆರಳಿದ ಕಾಂಗ್ರೆಸ್ ಮುಖಂಡರ ನಿಯೋಗವು ಪೊಲೀಸರಿಗೆ ದೂರು ನೀಡಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ದೂರು ನೀಡುವ ವೇಳೆ ಚಂದ್ರಪ್ರಕಾಶ್ ಶೆಟ್ಟಿ, ಅಬ್ಬಾಸ್ ಆಲಿ, ಬಿ.ಆರ್. ಅಂಚನ್ ಹಾಗೂ ಸುದೀಪ್ ಶೆಟ್ಟಿ ಮಾಣಿ ಸೇರಿದಂತೆ ಹಲವರು ಹಾಜರಿದ್ದರು.