ದಾವಣಗೆರೆ,ಸೆಪ್ಟೆಂಬರ್ 08: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಹೊಡೆದು ಗಾಯಗೊಂಡಿದ್ದ ಚಿರತೆಯನ್ನು ರಕ್ಷಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆಯೇ ದಾಳಿ ನಡೆಸಿರುವ ರೋಚಕ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದೆ.
ಘಟನೆಯ ವಿವರ:
ರಾತ್ರಿ ಸುಮಾರು 11 ಗಂಟೆಯ ವೇಳೆಗೆ ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನವೊಂದು ಡಿಕ್ಕಿಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಚಿರತೆ, ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದು ನರಳಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಗಾಯಗೊಂಡ ಚಿರತೆಗೆ ಚಿಕಿತ್ಸೆ ನೀಡಿ ರಕ್ಷಿಸುವ ಉದ್ದೇಶದಿಂದ ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ನೋವಿನಿಂದ ಆತಂಕಗೊಂಡಿದ್ದ ಚಿರತೆ ಏಕಾಏಕಿ ಸಿಬ್ಬಂದಿ ಮೇಲೆರಗಿ ದಾಳಿ ನಡೆಸಿದ್ದು, ಅರಣ್ಯ ಇಲಾಖೆಯ ಹೋಮ್‌ಗಾರ್ಡ್ ಒಬ್ಬರ ಕೈಗೆ ಗಾಯವಾಗಿದೆ. ತಕ್ಷಣವೇ ಗಾಯಾಳು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ನಂತರ ಹೊಸಪೇಟೆಯಿಂದ ಆಗಮಿಸಿದ ವನ್ಯಜೀವಿ ಪಶುವೈದ್ಯರ ತಂಡವು ಚಿರತೆಗೆ ಅರವಳಿಕೆ ಮದ್ದು (Anesthesia) ನೀಡಿತು. ಚಿರತೆ ಪ್ರಜ್ಞೆ ತಪ್ಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಳಸಿ ಅದನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.
ಗಂಭೀರವಾಗಿ ಗಾಯಗೊಂಡಿರುವ ಚಿರತೆಯನ್ನು ಹೆಚ್ಚಿನ ಚಿಕಿತ್ಸೆ ಹಾಗೂ ಆರೈಕೆಗಾಗಿ ಶಿವಮೊಗ್ಗದ ತ್ಯಾವರೆಕೊಪ್ಪ ವನ್ಯಜೀವಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ಘಟನೆಯಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಪ್ರದೇಶದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Video Link