BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

DYFI Mangaluru ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ, ಯುವಜನರ ಭದ್ರತೆಯ ಬದುಕಿಗಾಗಿ ಡಿವೈಎಫ್ಐ 15ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ.


ಮಂಗಳೂರು,ಸೆಪ್ಟೆಂಬರ್ 17 : ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ ಹಾಗೂ ಯುವಜನರ ಭದ್ರತೆಯ ಬದುಕಿಗಾಗಿ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) 15ನೇ ದ.ಕ ಜಿಲ್ಲಾ ಸಮ್ಮೇಳನವು ಸೆಪ್ಟೆಂಬರ್ 20, 2026ರಂದು ನಗರದ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಡೆಯಲಿದೆ.

ದೇಶದ ಯುವಜನರು ಇಂದು ನಿರುದ್ಯೋಗ, ಶಿಕ್ಷಣದ ದುಬಾರಿತನ, ಆರೋಗ್ಯ ಕ್ಷೇತ್ರದ ಖಾಸಗೀಕರಣ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಲಾಗಿತ್ತು. ಆದರೆ ಆ ಭರವಸೆ ಈಡೇರಿಲ್ಲ. ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕ ಪಾವತಿಸಿ ವಿವಿಧ ಶಿಕ್ಷಣ ಸಂಸ್ಥೆಗಳಿಂದ ಪದವಿ ಹಾಗೂ ಪ್ರಮಾಣಪತ್ರಗಳನ್ನು ಪಡೆದು ಹೊರಬರುತ್ತಿದ್ದರೂ, ಅವರ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ದೊರೆಯದೆ ನಿರುದ್ಯೋಗದ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಯುವಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳುವಲ್ಲಿಯೂ ವಿಫಲವಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿಯೂ ಖಾಸಗೀಕರಣ ಮತ್ತು ವಾಣಿಜ್ಯೀಕರಣ ಹೆಚ್ಚುತ್ತಿರುವ ಪರಿಣಾಮ ಶಿಕ್ಷಣವು ಸಾಮಾನ್ಯ ಜನರಿಗೆ ದುಬಾರಿಯಾಗುತ್ತಿದೆ. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣದ ದಾರಿದೀಪವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು, ಅಗತ್ಯ ಮೂಲಸೌಕರ್ಯ ಒದಗಿಸುವುದು ಹಾಗೂ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಿದೆ.

ಆರೋಗ್ಯ ಕ್ಷೇತ್ರದಲ್ಲಿಯೂ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೆ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಾಲ ಮಾಡುವ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನೆರವು ಕೋರುವ ಪರಿಸ್ಥಿತಿ ನಿರ್ಮಾಣವಾಗಿದೆ. 


ಮತ್ತೊಂದೆಡೆ ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಬದಲು ಖಾಸಗೀಕರಣಕ್ಕೆ ಅವಕಾಶ ನೀಡಲಾಗುತ್ತಿದೆ. ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಹಾಗೂ ಅಗತ್ಯ ಮೂಲಸೌಕರ್ಯದ ಕೊರತೆ ಇದೆ. ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಹಾಗೂ ಉಚಿತ ಸಾರ್ವಜನಿಕ ಆರೋಗ್ಯ ಸೇವೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಯುವಜನರಿಗೆ ಉದ್ಯೋಗ, ಗುಣಮಟ್ಟದ ಶಿಕ್ಷಣ, ಉಚಿತ ಹಾಗೂ ಸಮರ್ಪಕ ಆರೋಗ್ಯ ಸೇವೆ ಮತ್ತು ಭದ್ರತೆಯ ಬದುಕನ್ನು ಖಾತ್ರಿಪಡಿಸಬೇಕು. ಯುವಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿ, ಅವರ ಹಕ್ಕು ಮತ್ತು ಬೇಡಿಕೆಗಳನ್ನು ಈಡೇರಿಸಬೇಕು ಎಂಬ ಪ್ರಮುಖ ಆಶಯಗಳೊಂದಿಗೆ ಈ ಜಿಲ್ಲಾ ಸಮ್ಮೇಳನ ನಡೆಯಲಿದೆ.

ಸಮ್ಮೇಳನವನ್ನು ರಾಷ್ಟ್ರೀಯ ವಿದ್ಯಾರ್ಥಿ, ಯುವಜನ ನಾಯಕಿ ಕಾಂ. ದಿಪ್ಸಿತಾ ಧಾರ್ (ಪಶ್ಚಿಮ ಬಂಗಾಳ) ಉದ್ಘಾಟಿಸಲಿದ್ದಾರೆ. ಸಮ್ಮೇಳನಕ್ಕೆ ಮುಖ್ಯ ಅತಿಥಿಗಳಾಗಿ ಡಿವೈಎಫ್ಐ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಕಾಂ. ಲವಿತ್ರ ವಸ್ತ್ರದ್ ಹಾಗೂ ರಾಜ್ಯ ಕಾರ್ಯದರ್ಶಿ ಕಾಂ. ಬಸವರಾಜ್ ಪೂಜಾರ್ ಆಗಮಿಸಲಿದ್ದಾರೆ.

ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಕಾಂ. ಬಿ.ಕೆ. ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಶಾಧಿಕಾರಿ ಮನೋಜ್ ವಾಮಂಜೂರು, ರಾಜ್ಯ ಸಮಿತಿ ಸದಸ್ಯರಾದ ಡಾ. ಜೀವನ್ ರಾಜ್ ಕುತ್ತಾರ್ ಹಾಗೂ ಮಾಧುರಿ ಬೋಳಾರ ಸಮ್ಮೇಳನದಲ್ಲಿ ಉಪಸ್ಥಿತರಿರುವರು.

ಸಮ್ಮೇಳನದ ಅಂಗವಾಗಿ ಸೆಪ್ಟೆಂಬರ್ 20ರಂದು ಬೆಳಿಗ್ಗೆ 9:30ಕ್ಕೆ ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಬಿಷಪ್ ಜತ್ತನ್ನ ಸಭಾಂಗಣದವರೆಗೆ ಯುವಜನರ ಆಕರ್ಷಕ ಮೆರವಣಿಗೆ ನಡೆಯಲಿದೆ.

ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವಜನರು ಎದುರಿಸುತ್ತಿರುವ ನಿರುದ್ಯೋಗ, ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರದ ಸಮಸ್ಯೆಗಳು, ಮಾದಕ ವ್ಯಸನ, ಯುವಜನರ ಭದ್ರತೆ ಹಾಗೂ ಸಾಮಾಜಿಕ ಸವಾಲುಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!