ಕಾರವಾರ,ಸೆಪ್ಟೆಂಬರ್ 08 : ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಕಾರವಾರದಲ್ಲಿ ನಡೆದಿದೆ.
ಮೃತರನ್ನು ಕಾರವಾರ ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಆಗಿರುವ ಪಂಡರಿನಾಥ್ ನಾಯ್ಕ (51) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಪಂಡರಿನಾಥ್ ಅವರು ಮಂಗಳವಾರ ಮುಂಜಾನೆ ಎಂದಿನಂತೆ ಕಚೇರಿ ಸಮಯಕ್ಕೆ ಸರಿಯಾಗಿ ಕಾರವಾರ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದರು. ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಕುಸಿದುಬಿದ್ದಿದ್ದಾರೆ.
ಕೂಡಲೇ ಎಚ್ಚೆತ್ತ ಕಚೇರಿಯ ಸಿಬ್ಬಂದಿ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆಗೆ ಪ್ರಯತ್ನಿಸಿದ್ದಾರೆ. ಆದರೆ, ಮಾರ್ಗಮಧ್ಯೆ ಹಾಗೂ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಪಂಡರಿನಾಥ್ ನಾಯ್ಕ ಕೊನೆಯುಸಿರೆಳೆದಿದ್ದಾರೆ. ತೀವ್ರ ಹೃದಯಾಘಾತದಿಂದಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.