ತಿರುವನಂತಪುರಂ, ಸೆ 21: ಕೇರಳದಲ್ಲಿ ಮಳೆಯಾರ್ಭಟ ಮುಂದುವೆದಿದ್ದು, ಹಠಾತ್ ಪ್ರವಾಹ ಹಾಗೂ ಭೂಕುಸಿತಕ್ಕೆ 9 ಮಂದಿ ಬಲಿಯಾಗಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕೇರಳದಲ್ಲಿ ಮುಂದುವರಿದಿರುವ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತದ ಅನಾಹುತಗಳು ಸಂಭವಿಸಿದ್ದು, ಇದುವರೆಗೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವರು ನಾಪತ್ತೆಯಾಗಿದ್ದಾರೆ. ಮಲಪ್ಪುರಂನಲ್ಲಿ ಐವರು, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ತಲಾ ಇಬ್ಬರು ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್:
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ವಿಶೇಷವಾಗಿ ಬೆಟ್ಟಗುಡ್ಡ ಪ್ರದೇಶಗಳ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಮಲಪ್ಪುರಂನಲ್ಲಿ ಹೆಚ್ಚು ಸಾವುಗಳು ಸಂಭವಿಸಿದ್ದು, ನಿಲಂಬೂರು ಭಾಗದಲ್ಲಿ ಹಠಾತ್ ಪ್ರವಾಹಕ್ಕೆ ಸಿಲುಕಿ ಐವರು ಕೊಚ್ಚಿಹೋಗಿದ್ದಾರೆ. ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆಲವರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಅಧಿಕಾರಿಗಳ ತುರ್ತು ಸಭೆ:
ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ತುರ್ತು ಸಭೆ ನಡೆಸಿ ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲಾಧಿಕಾರಿಗಳಿಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.
ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಕಂದಾಯ ಇಲಾಖೆಗಳು ಒಟ್ಟಾಗಿ ಪರಿಹಾರ ಕಾರ್ಯದಲ್ಲಿ ನಿರತವಾಗಿವೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ಎನ್‌ಡಿಆರ್‌ಎಫ್ (NDRF) ತಂಡಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ.
ಅಣೆಕಟ್ಟುಗಳ ನೀರಿನ ಮಟ್ಟದ ಮೇಲೆ ನಿರಂತರ ಕಣ್ಣಿಡಲು ಕೇರಳ ರಾಜ್ಯ ವಿದ್ಯುತ್ ಮಂಡಳಿ ಹಾಗೂ ನೀರಾವರಿ ಇಲಾಖೆಗೆ ಸೂಚಿಸಲಾಗಿದೆ. ರಾತ್ರಿ ವೇಳೆ ಬೆಟ್ಟಗುಡ್ಡ ಪ್ರದೇಶಗಳಿಗೆ ಪ್ರಯಾಣಿಸದಂತೆ ಮತ್ತು ತಗ್ಗು ಪ್ರದೇಶದ ಜನತೆ ಎಚ್ಚರದಿಂದಿರುವಂತೆ ಕಟ್ಟುನಿಟ್ಟಿನ ಸಲಹೆ ನೀಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿ ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ..!