ಮಂಡ್ಯ,ಸೆ.19 :ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್‌ನಿಂದ ಅಂಡರ್‌ಪಾಸ್ ಕೆಳಗೆ ಬಿದ್ದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಉಮ್ಮಡಹಳ್ಳಿ ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ.
ಬೆಂಗಳೂರಿನ ಹರೀಶ್ ಎಂಬುವವರ ಪತ್ನಿ ಅಂಜನಾ (32) ಮೃತ ದುರ್ದೈವಿ. ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿದ್ದ ಹರೀಶ್ ಹಾಗೂ ಅವರ ಸ್ನೇಹಿತ ನಿತಿನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿವರ:
ದಂಪತಿ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ದಂಪತಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಸಾಫ್ಟ್‌ವೇರ್ ಕಂಪನಿಗಳನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಮೃತ ಅಂಜನಾ ಅವರು ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಾರು ಫ್ಲೈಓವರ್‌ನಿಂದ ಕೆಳಗೆ ಬೀಳುವ ರಭಸಕ್ಕೆ ವಿಂಡೋ ಗಾಜು ತೆರೆದುಕೊಂಡು ಅಂಜನಾ ಹೊರಗೆ ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಡ್ಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.