ಮಂಗಳೂರು, ಸೆ.23: ಮಂಗಳೂರು ನಗರದ ಪಡೀಲ್ ಬಳಿ ಅಕ್ರಮವಾಗಿ ಹಾಗೂ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ವಶಪಡಿಸಿಕೊಂಡಿದ್ದಾರೆ. ಬಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.
ಮಂಗಳೂರಿನ ಪಡೀಲ್ ಟೊಯೋಟಾ ಕಾರ್ ಶೋರೂಮ್ ಬಳಿ ಲಾರಿಯೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಬಜರಂಗದಳದ ಮುಖಂಡರು ಕಂಕನಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.ತಕ್ಷಣ ಎಚ್ಚೆತ್ತ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಆ ಲಾರಿಯನ್ನು ತಡೆದು ತೀವ್ರ ಪರಿಶೀಲನೆ ನಡೆಸಿದ್ದಾರೆ.
ಲಾರಿಯಲ್ಲಿ ಟಾರ್ಪಲ್ ಹೊದಿಸಿ, ಒಟ್ಟು 17 ಜಾನುವಾರುಗಳನ್ನು ಯಾವುದೇ ಉಸಿರಾಟಕ್ಕೆ ಜಾಗವಿಲ್ಲದಂತೆ ಅತ್ಯಂತ ಕ್ರೂರವಾಗಿ ಮತ್ತು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಎಲ್ಲಾ ಜಾನುವಾರುಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಈ ಅಕ್ರಮ ಸಾಗಾಟದಲ್ಲಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ ಮಾದಕ ವಸ್ತು ಪತ್ತೆಯಾಗಿದ್ದು, ಪೊಲೀಸರು ಈ ನಿಟ್ಟಿನಲ್ಲಿಯೂ ತನಿಖೆ ಮುಂದುವರಿಸಿದ್ದಾರೆ.
ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಹಾಗೂ ಜಾಲದ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.