ಮಂಗಳೂರು, ಸೆ 21 : ವಂಚನೆ (Cheating) ಪ್ರಕರಣವೊಂದರಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುತ್ತಿದ್ದ ಬಜ್ಜೆ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ಅವರು ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಘಟನೆಯ ವಿವರ:
ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚೀಟಿಂಗ್ ಪ್ರಕರಣದಲ್ಲಿ ಆರೋಪಿಗಳಿಂದ ಅಮಾನತ್ತುಪಡಿಸಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಒಟ್ಟು 25,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಈಗಾಗಲೇ 15,000 ರೂಪಾಯಿ ಮುಂಚಿತವಾಗಿ ಪಡೆದುಕೊಂಡಿದ್ದ ಅವರು, ಹೆಚ್ಚುವರಿಯಾಗಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿತ್ತು.
ದಿನಾಂಕ 21/09/2026 ರಂದು ಫಿರ್ಯಾದುದಾರರಿಂದ ರೂ. 5,000 (ಐದು ಸಾವಿರ) ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಬಜ್ಜೆ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.