ಮಂಗಳೂರು, ಸೆ 30 : ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದ ಭಾರೀ ಸ್ಫೋಟ - ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಈ ಮಾಹಿತಿ ತಿಳಿಸಿದ್ದಾರೆ.
ಅಲ್ಲದೆ, ಘಟನೆಯಲ್ಲಿ ಶೇ.35ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿರುವ ರಾಜೇಶ್ ಬ್ಯಾಪ್ಟಿಸ್ಟ್ ಅವರು ಶ್ರೀನಿವಾಸ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ತೀವ್ರತೆಯಿಂದ ಗಾಯಗೊಂಡಿರುವ ಇತರ 8 ಮಂದಿ ಸಿಬ್ಬಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಕಮಿಷನರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನೀಶ್ ಕರ್ಕಡಾ(Manish Karkada) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಅವಘಡ ನಡೆದ ಪ್ರದೇಶದಲ್ಲಿ ಕಣ್ಮರೆಯಾಗಿದ್ದು, ಮನೀಶ್ ಕರ್ಕಡಾ ಅವರು ಅಲ್ಲಿ ಗುತ್ತಿಗೆಯಾಧಾರದಡಿ ಕೆಲಸ ನಿರ್ವಹಿಸುತ್ತಿದ್ದರುಎನ್ನಲಾಗಿದೆ. ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಸುಟ್ಟ ಗಾಯಗಳು ಹಾಗೂ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.