ಮಂಗಳೂರು,ಸೆಪ್ಟೆಂಬರ್ 04 : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೇಳುತ್ತೇನೆ. ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕನಾಗುತ್ತೇನೆ ಎಂದು ಪುತ್ತೂರಿನ ಕಾಂಗ್ರೆಸ್ ಮುಖಂಡ ಹಕೀಮ್ ಕೂರ್ನಡ್ಕ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ತಾವು ಸುದ್ದಿಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿ ಮುಗಿದ ಬಳಿಕವೂ ಶಾಸಕ ಅಶೋಕ್ ರೈ ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನನ್ನೊಂದಿಗೆ ಸಂಘರ್ಷಕ್ಕೆ ಮುಂದಾಗಿದ್ದರು” ಎಂದು ಅವರು ಆರೋಪಿಸಿದರು.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಹಕೀಮ್ ಕೂರ್ನಡ್ಕ ಒತ್ತಾಯಿಸಿದರು. ತಾನು ಕಾಂಗ್ರೆಸ್ ಕಾರ್ಯಕರ್ತನಲ್ಲ ಎಂದು ಆರೋಪಿಸಿ ಅಶೋಕ್ ರೈ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಅವರು ಹೇಳಿದರು.
ಅಲ್ಲದೆ, ಕಾಂಗ್ರೆಸ್ ಮುಖಂಡರಾಗಿದ್ದ ಜಲೀಲ್ ಕರೋಪಾಡಿ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ಜೊತೆಯಲ್ಲಿ ಇರಿಸಿಕೊಂಡಿರುವ ಶಾಸಕ ಅಶೋಕ್ ರೈ ಹಾಗೂ ಅವರ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವಿಚಾರದಲ್ಲಿ ಅಗತ್ಯವಿದ್ದರೆ ನ್ಯಾಯಾಲಯದ ಮೆಟ್ಟಿಲೇರಲು ತಾನು ಸಿದ್ಧನಿದ್ದೇನೆ ಎಂದು ಹಕೀಮ್ ಕೂರ್ನಡ್ಕ ತಿಳಿಸಿದ್ದಾರೆ.