ಉಡುಪಿ, ಸೆ 23 : ಉಡುಪಿ ಜಿಲ್ಲೆಯ ಶಿರ್ವ ಮತ್ತು ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಗಾಂಜಾ, ಮೆಥಾಂಫೆಟಮೈನ್, ನಗದು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡು ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ. ವಶಪಡಿಸಿಕೊಳ್ಳಲಾದ ಸೊತ್ತುಗಳ ಒಟ್ಟು ಮೌಲ್ಯ ₹16,01,584 ಎಂದು ಅಂದಾಜಿಸಲಾಗಿದೆ.
ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಭಾರಿ ದಾಳಿ:
ಶಿರ್ವ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಭದ್ರಮ್ಮ ರಸ್ತೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಾಳಿಯಲ್ಲಿ 1.354 ಕೆಜಿ ಗಾಂಜಾ, 32.74 ಗ್ರಾಂ ಮೆಥಾಂಫೆಟಮೈನ್, ಎರಡು ಕಾರು, ಒಂದು ಸ್ಕೂಟರ್, 9 ಮೊಬೈಲ್‌ಗಳು, ಎರಡು ತೂಕದ ಯಂತ್ರಗಳು ಹಾಗೂ ₹75,010 ನಗದು ಸೇರಿ ಒಟ್ಟು ₹13.96 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ನಾಜ್ ಅಲಿಯಾಸ್ ಮೊಹಮ್ಮದ್ ಅನಾಸ್, ಮೊಹಮ್ಮದ್ ಅಲ್ತಾಪ್, ಸ್ಟ್ಯಾನಿ ಸಂದೀಪ್, ಶಾಕೀಬ್, ಮೊಹಮ್ಮದ್ ಫೈಜಲ್, ಇಮ್ತಿಯಾಜ್, ಅಜಯ್ ಕುಮಾರ್ ಹಾಗೂ ಸಂತೋಷ್ ದೇವಾಡಿಗ ಎಂಬ 8 ಮಂದಿಯನ್ನು ಬಂಧಿಸಲಾಗಿದೆ.
ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಶಿವಳ್ಳಿಯಲ್ಲಿ ದಾಳಿ:
ಇದೇ ವೇಳೆ ಉಡುಪಿ ನಗರ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಾದಿರಾಜ ರಸ್ತೆಯ 3ನೇ ಅಡ್ಡರಸ್ತೆಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1.659 ಕೆಜಿ ಗಾಂಜಾ, ₹1.26 ಲಕ್ಷ ನಗದು ಹಾಗೂ ಒಂದು ಡಿಜಿಟಲ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಸಾಗರ ಮೂಲದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ವಾಸಿಸುತ್ತಿದ್ದ 31 ವರ್ಷದ ಶ್ರೀವತ್ಸ ಕೆ.ಜಿ. ಎಂಬಾತನನ್ನು ಬಂಧಿಸಲಾಗಿದೆ.
ಕೇರಳದಿಂದ ಗಾಂಜಾ ಪೂರೈಕೆ:
ಪೊಲೀಸ್ ವಿಚಾರಣೆಯ ವೇಳೆ ಆರೋಪಿಗಳು ಕೇರಳದ ಉಪ್ಪಳದಿಂದ ಗಾಂಜಾ ತಂದು ಉಡುಪಿ ಸುತ್ತಮುತ್ತ ಮಾರಾಟ ಮಾಡುತ್ತಿದ್ದರೆಂದು ಮಾಹಿತಿ ನೀಡಿದ್ದಾರೆ. ಬಂಧಿತರ ಪೈಕಿ ಕೆಲವರ ವಿರುದ್ಧ ಈ ಹಿಂದೆ ಉಡುಪಿ, ಮಲ್ಪೆ, ಮಣಿಪಾಲ, ಕಾರ್ಕಳ ಗ್ರಾಮಾಂತರ ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಶಿರ್ವ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಅನಿಲ್ ತನಿಖೆ ನಡೆಸುತ್ತಿದ್ದಾರೆ. ಉಡುಪಿ ನಗರ ಠಾಣೆಯಲ್ಲೂ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಪ್ರಕಾಶ್ ತನಿಖೆ ಕೈಗೊಂಡಿದ್ದಾರೆ. ಎಎಸ್‌ಪಿ ಈಶಿತಾ ಗುಪ್ತಾ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಠಾಣೆ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್.ಪಿ ಮತ್ತು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.