ಕಾಸರಗೋಡು,ಅ.02: ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ತೋರೋತ್ ನಿವಾಸಿ ಹರಿಶ್ರೀ (40) ಮೃತಪಟ್ಟವರು. ಕಣ್ಣೂರು ಜಿಲ್ಲೆಯ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಜುಲೈ 21ರಂದು ಹರಿಶ್ರೀ ಅವರು ಮನೆಯ ಸ್ನಾನಗೃಹದಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದರೆನ್ನಲಾಗಿದೆ. ತೀವ್ರವಾಗಿ ಸುಟ್ಟು ಗಾಯಗೊಂಡಿದ್ದ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಅಲ್ಲಿ ಹಲವು ದಿನಗಳ ಕಾಲ ಚಿಕಿತ್ಸೆ ನೀಡಿದ ಬಳಿಕ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.